ಕನ್ನಡಪ್ರೇಮದ ಕುರಿತು ಒಂಚೂರು…
ನಾನು ಕನ್ನಡಿಗ ಅಂತ ಅನ್ನುವಾಗ ನನಗೆ ಚೂರೂ ಹೆಮ್ಮೆಯೇ ಆಗುತ್ತಿದ್ದಿರಲಿಲ್ಲ.
ಹೌದು. ಇಸ್ಕೂಲು, ಹೈಸ್ಕೂಲು ಓದುವಾಗಲೆಲ್ಲ ’ನಾನು ಕನ್ನಡಿಗ’ ಅನ್ನುವುದರಲ್ಲಿ ಅಂತಹ ವಿಶೇಷಗಳೇನೂ ಇರಲಿಲ್ಲ. ಸುತ್ತಮುತ್ತಲೂ ಮುತ್ತಿಕೊಂಡಿದ್ದ ಗೆಳೆಯರೆಲ್ಲರೂ ಕನ್ನಡಿಗರೇ ಆಗಿದ್ದರಿಂದ ಅದೊಂದು ಸ್ಪೆಷಲ್ ಅನ್ನುವ ಭಾವ ಮೂಡುತ್ತಿರಲಿಲ್ಲ. ಕಾಲೇಜುಪರ್ವದಲ್ಲಿ ಕನ್ನಡಿಗ ಆಗಿರುವುದು ಕೊಂಚ ಸಂಕಟಗಳಿಗೆ ಸಿಕ್ಕಿಸಿತ್ತಾದರೂ ಅದಕ್ಕೆ ಕಾರಣ ’ನಾ ಕನ್ನಡದವ’ ಆಗಿರುವುದಲ್ಲ, ’ಇಂಗ್ಲೀಷ್ ಅರಿವು ಕಡಿಮೆ ಇರುವುದು’ ಎಂಬ ಜ್ಞಾನೋದಯ ಆದಮೇಲೆ ಆ ಕುರಿತು ಆಲೋಚನೆಯೂ ಬರಲಿಲ್ಲ.
ಆದರೆ ಕರುನಾಡ ಕೋಟೆ ದಾಟಿದ ಮೇಲೆ ಕನ್ನಡ ಎಂಬ ಭಾಷೆ ಎಷ್ಟು ಸಿಹಿ ಅನ್ನುವುದು ಗೋಚರವಾಗುತ್ತಿತ್ತು. ಇದೊಂಥರ ಮನೆಯಲ್ಲಿದ್ದಾಗ ಹಠ, ಗೊಂದಲ ಮಾಡುತ್ತಿದ್ದು ನಂತರ ಅಮ್ಮನ ಮಹತ್ವ ಅರಿವಾಗುವ ಹಾಸ್ಟೆಲ್ ಹುಡುಗನ ರೀತಿ. ಸಿಂಗಾಪೂರ್ ಗೆ ಬಂದ ಮೇಲೆ ನನ್ನ ಜತೆ ಕೆಲಸ ಮಾಡುವವರಿಗೆ ನನ್ನ ರಾಜ್ಯದ ಕುರಿತು, ಭಾಷೆಯ ಕುರಿತು ವಿವರಿಸುವಾಗ ಅದೆಂತದೋ ಪದಗಳಲ್ಲಿ ಸಿಲುಕದ ಸಂತಸ. ಅವರಂತೂ ಅಮೇರಿಕದ ವೈಭವವನ್ನೂ ಈ ರೀತಿಯ ವಿವರಣೆಯ ಸಹಿತ ಕೇಳಿರಲಿಕ್ಕಿಲ್ಲ, ಹಾಗೆ ಇರುತ್ತಿತ್ತು. ಇಲ್ಲಿಯ ಹೆಚ್ಚಿನವರಿಗೆ ಭಾರತೀಯರೆಂದರೆ ತಮಿಳರು ಅನ್ನುವ ಭಾವ ಇರುವುದರಿಂದ, ನನ್ನ ಭಾರತೀಯತೆ ಅರಿವಾದ ಕೂಡಲೇ, ’ತಮಿಳಾ?’ ಎನ್ನುವ ಪ್ರಶ್ನೆ ಕೇಳುತ್ತಾರೆ. “ಅಲ್ಲ, ನಾನು ಕನ್ನಡಿಗ’ ಎಂಬ ಉತ್ತರಕ್ಕೆ ಪೂರ ಹೆಮ್ಮೆಯ ಲೇಪ. ಅಲ್ಲೇ ಹುಟ್ಟಿ, ಅಲ್ಲೇ ಬೆಳೆದಿದ್ದರೂ ಯಾವಾಗಲೂ ಈ ವಾಕ್ಯ ಆಡಿದ ಉದಾಹರಣೆ ನೆನಪಿಲ್ಲ. ಮತ್ತಷ್ಟು ಓದು 





