ಯಾನದ ಕಿಟಕಿಯಿಂದೊಂದು ಇಣುಕು ನೋಟ
ಭೈರಪ್ಪನವರ ಕಾದಂಬರಿಗಳು ವಸ್ತು ವಿಷಯದಿಂದಲೂ, ಕಥೆಯ ಗಂಭೀರ ಹಂದರದಿಂದಲೂ ಇತರರಿಗಿಂತ ಭಿನ್ನವಾಗಿರುವ ವಿಚಾರ ತಿಳಿಯದ್ದೇನಲ್ಲ. ಈ ಸರಣಿಗೆ ಮತ್ತೊಂದು ಸೇರ್ಪಡೆ ‘ಯಾನ’. ಇಂಗ್ಲೆಂಡಿನ ಸಾಹಿತ್ಯಾಸಕ್ತರು ಯಾನವನ್ನು ಓದಿ ವಿಮರ್ಶಿಸಿ ಬರೆದ ಲೇಖನಗಳ ಸರಣಿ ನಿಮ್ಮ ಮುಂದಿದೆ.
ಉಮಾ ವೆಂಕಟೇಶ್, ದಾಕ್ಷಾಯಿಣಿ, ಕೇಶವ್ ಕುಲಕರ್ಣಿ ಹಾಗೂ ಸುದರ್ಶನ ಗುರುರಾಜರಾವ್ ಬರೆದ ಇಣುಕು ನೋಟದ ಪರಿಚಯ ನಿಮಗೆ ನೀಡುತ್ತಿದ್ದೇವೆ,ಪ್ರಯಾಣದಲ್ಲಿ ಹೊರ ನೋಟದ ಅನುಭವ ಕಣ್ಣಿಗೆ ಒಂದೇ ಆಗಿದ್ದರೂ, ಅನುಭಾವ ವಿಭಿನ್ನವೇ
– ಸುದರ್ಶನ ಗುರುರಾಜರಾವ್
ಯಾನದಲ್ಲಿ ಬರುವ ಪ್ರಮುಖ ಪಾತ್ರಗಳಾದ ಉತ್ತರಾ (ಹೆಣ್ಣು) ಹಾಗೂ ಸುದರ್ಶನ (ಗಂಡು) ಎರಡೂ ನನಗೆ ಆತ್ಮೀಯವಾದ ಹೆಸರುಗಳೇ. ಉತ್ತರಾ ನನ್ನ ಜನ್ಮ ನಕ್ಷತ್ರದ ಹೆಸರಾದರೆ ಸುದರ್ಶನ ನನ್ನ ಹೆಸರೇ ಆಗಿದೆ. ಸ್ವನಾಮ ಪ್ರೇಮ, ಸ್ವನಾಮಾನುಕಂಪ ಹಾಗೂ ಪಕ್ಷಪಾತಗಳು ತಿಳಿಯದ್ದೇನಲ್ಲ. ಈ ಹಿನ್ನೆಲೆಯಲ್ಲಿ ಈ ಕಾದಂಬರಿಯ ಪಾತ್ರಗಳನ್ನು ನಿರೂಪಣೆಯನ್ನು ಹಾಗೂ ಕಥಾವಸ್ತುವನ್ನು ಅದಷ್ಟು ವಸ್ತುನಿಷ್ಠ ವಾಗಿ ಮಾಡಲು ಪ್ರಯತ್ನಿಸಿದ್ದೇನೆಂದು ಮೊದಲೇ ಘೋಷಿಸಿಬಿಡುತ್ತೇನೆ.
‘’ಯಾನ’’ ಭೂಮಿಯಿಂದ ಬೇರೊಂದು ಸೌರವ್ಯೂಹವನ್ನೇ ಹೊಕ್ಕು ಅಲ್ಲಿ ಜೀವಸಂಕುಲವನ್ನು ಬೆಳೆಸಬಲ್ಲ, ಪೋಷಿಸಬಲ್ಲ ಗ್ರಹವೊಂದನ್ನು ಹುಡುಕುವ ಮಾನವನ ಮಹದೋದ್ದೇಶದ ಪ್ರಯಾಣಕಥನ., ಪ್ರಯಾಣವೊಂದು ಧಿಢೀರ್ ಎಂದು ಪ್ರಾರಂಭವಾಗುವುದಿಲ್ಲವಷ್ಟೆ ; ಅದಕ್ಕೆ ತಯಾರಿ ಬೇಕು. ಆ ತಯಾರಿಯ ಹಂತದಲ್ಲಿ ಪಾತ್ರ ಪರಿಚಯಗಳಗ್ಗುವುದಲ್ಲದೆಅವರ ಜೀವನದ, ಆ ದೇಶ ಕಾಲಗಳ ವಿದ್ಯಮಾನಗಳ ಭೂಮಿಕೆ ಕಾದಂಬರಿಯಲ್ಲಿ ಸಿದ್ದಹವಾಗುತ್ತದೆ. ಕಥೆಯು ಭೂತ ವರ್ತಮಾನಗಳ ಮಧ್ಯೆ ತುಯ್ದಾಡುತ್ತಾ,ಪಾತ್ರಗಳ ಮನೋವ್ಯಾಪಾರವನ್ನು ಅವರು ನಂಬಿದ ತತ್ವಗಳ /ಮಾನಸಿಕ ಮಸೂರದ ಮೂಲಕ ಹಾಗೂ ಅವರುಗಳು ಇರುವ ದೇಶ ಕಾಲ ಧರ್ಮ ನಂಬಿಕೆಗಳ ಚೌಕಟ್ಟಿನಲ್ಲಿ ತಿಳಿಸುತ್ತಾ ಸಾಗುತ್ತದೆ. ಇಲ್ಲಿ ಅರಿವು ಮತ್ತು ನಂಬಿಕೆಗಳ ನಡುವಿನ ವ್ಯತ್ಯಾಸ ಗಮನಿಸಬೇಕು.ನಂಬಿಕೆ ಮತ್ತು ಆಯ್ಕೆಗಳ ನಡುವಿನ ತಾಕಲಟಗಳೂ ಬರುತ್ತವೆ. ಮಾನವನ ಜೀವನದ ವಿದ್ಯಮಾನಗಳು ಮತ್ತು ಅಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸರಳ ರೇಖಾತ್ಮಕವಾಗಿರದೆ ಎಡ ಬಲ ಊರ್ಧ್ವ ಹಾಗೂ ಅಧೋಮುಖಗಳಿಂದ ಬಂದು ಬಡಿಯುವ ಹಲಾವಾರು ಘಟನೆ,ಒತ್ತಡಗಳ ಸಂಕೀರ್ಣ ಉತ್ಪತ್ತಿ ಎಂಬುದು ಭೈರಪ್ಪನವರ ಎಲ್ಲ ಕಾದಂಬರಿಗಳಂತೆ ಇಲ್ಲಿಯೂ ಹಾಸು ಹೊಕ್ಕಾಗಿರುವ ಅಂಶ ;ಆದರೆ ಆಯಾಮ ಮಾತ್ರ ಬೇರೆ.
ಮೊದಲಿಗೆ ಪಾತ್ರಗಳನ್ನೂ ಕುರಿತು ನೋಡೋಣ.