ನಾವು, ನಮ್ಮ ಹರಕೆ, ನಮ್ಮ ಸೇವೆ!
– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ದಿನಾಂಕ 19-04-2015 ರಂದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ “ಮಾದಪ್ಪನ ಸನ್ನಿಧಿಯಲ್ಲಿ ಸಣ್ಣ ಸ್ವಚ್ಛಭಾರತ್” ಲೇಖನ ಪ್ರಕಟವಾಯಿತು. ಇದರಲ್ಲಿ ಜಾಗದ ಮಿತಿಯಿಂದಲೋ ಸೈದ್ಧಾಂತಿಕ ಮಿತಿಯಿಂದಲೋ ಲೇಖನದ ಬಹುತೇಕ ಭಾಗಗಳಿಗೆ ಕತ್ತರಿ ಪ್ರಯೋಗವಾಗಿತ್ತು. ಅದರ ಪೂರ್ಣಪಾಠ ಇಲ್ಲಿದೆ.
ಮಲೆ ಮಹದೇಶ್ವರ ಬೆಟ್ಟ. ಬೆಳಿಗ್ಗೆ ಆರು ಗಂಟೆಯ ಸಮಯ. ದೇವಾಲಯದ ಮುಂಭಾಗ ರಾತ್ರಿ ಬಂದ ಯಾತ್ರಿಗಳು ಅನುದ್ದೇಶಪೂರ್ವಕ ಚೆಲ್ಲಿದ ಕಸಕಡ್ಡಿಗಳು ಅಲ್ಲಲ್ಲಿ ಹರಡಿದ್ದವು. ಹರಕೆ ತೀರಿಸಲು ಬಂದ ಭಕ್ತಾದಿಗಳಿಂದ ಬಗೆಬಗೆಯ ಆಚರಣೆಗಳು ಸುತ್ತಲೂ ನಡೆಯುತ್ತಿದ್ದವು. ಮುಖ್ಯ ದೇಗುಲದ ಮುಂಭಾಗದಲ್ಲಿರುವ ಕಲ್ಯಾಣಿ ಪಕ್ಕದ ಜಡೆ ಮಾದೇಶ್ವರ ಗುಡಿಯ ಮುಂದೆ ಹತ್ತಾರು ಹೆಂಗಸರು ಮಕ್ಕಳು ಸೇರಿಕೊಂಡಿದ್ದರು. ಒಬ್ಬ ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದಂತೆ ಸುತ್ತ ನೆರೆದಿದ್ದವರು ಒಕ್ಕೊರಲಲ್ಲಿ “ಉಘೇ ಉಘೇ” ಅನ್ನುತ್ತಿದ್ದರು. ಗುಡಿಯ ಮುಂದೆ ಕತ್ತೆಯೊಂದು ತರಬೇತಿ ನೀಡಿದ್ದಾರೇನೋ ಎಂಬಂತೆ ಸ್ತಬ್ದವಾಗಿ ನಿಂತಿತ್ತು. ಕೆಲವು ಹೆಂಗಸರು ಅದರ ಕಾಲು ತೊಳೆದರು. ಮತ್ತೆ ಕೆಲವರು ಅದಕ್ಕೆ ಮಲ್ಲಿಗೆ ಹಾರ ತೊಡಿಸಿದರು. ಮತ್ತೆ ಹಲವರು ಅರಿಶಿಣ ಕುಂಕುಮ ಹಾಕಿ ಅದರ ಕಾಲಿಗೆ ಅಡ್ಡ ಬಿದ್ದರು. ಇನ್ನು ಕೆಲವರು ಆರತಿ ಬೆಳಗಿದರು.
ಕತ್ತೆಯ ಪಕ್ಕದಲ್ಲಿ ಹೊಚ್ಚ ಹೊಸ ತೆಂಗಿನ ಗರಿಯಿಂದ ತಯಾರಿಸಿದ ಒಂದಿಷ್ಟು ಪೊರಕೆಗಳನ್ನು ಸಾಲಾಗಿ ಜೋಡಿಸಿದ್ದರು. ಈ ಪೊರಕೆಗಳಿಗೆ ಅರಿಶಿನ ಕುಂಕುಮ ಹಾಕಿ, ಹೂವು ಏರಿಸಿ ಎಲ್ಲರೂ ಕೈ ಮುಗಿದರು. ಒಬ್ಬೊಬ್ಬರೂ ಒಂದೊಂದು ಪೊರಕೆಯನ್ನು ಕೈಗೆತ್ತಿಕೊಂಡರು. ಹುಡುಗ “ಹಾಲುಮಲೆ ಏಳುಮಲೆ, ಜೇನುಮಲೆ, ಎಪ್ಪತ್ತೇಳುಮಲೆ ನಮ್ಮ ಮುದ್ದು ಮಾದೇಶ್ವರನಿಗೆ ಉಘೇ ಅನ್ರಪ್ಪಾ” ಅನ್ನುತ್ತಿದ್ದ. ಉಳಿದವರು “ಉಘೇ ಉಘೇ” ಅನ್ನುತ್ತ ಸುತ್ತಲ ಕಸ ಕಡ್ಡಿಗಳನ್ನು ಗುಡಿಸಿ ಸ್ವಚ್ಛಮಾಡತೊಡಗಿದರು. ಅರ್ಧಗಂಟೆಯಲ್ಲಿ ಸುತ್ತಲ ಪರಿಸರ ತೊಳೆದಿಟ್ಟಂತೆ ಕಂಗೊಳಿಸತೊಡಗಿತು.