ವಿಷಯದ ವಿವರಗಳಿಗೆ ದಾಟಿರಿ

Archive for

22
ಆಗಸ್ಟ್

ಡಾ. ಯು.ಆರ್ ಅನಂತಮೂರ್ತಿ ನೆನಪಿನಲ್ಲಿ

– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

ಯು.ಆರ್ ಅನಂತಮೂರ್ತಿಕನ್ನಡದ ಶ್ರೇಷ್ಟ ಬರಹಗಾರ ಮತ್ತು ಚಿಂತಕ ಡಾ.ಯು.ಆರ್.ಅನಂತಮೂರ್ತಿ ನಿಧನರಾಗಿ ಅಗಸ್ಟ್ 22 ಕ್ಕೆ ಒಂದು ವರ್ಷವಾಯಿತು. ತಮ್ಮ ಸಮಗ್ರ ಸಾಹಿತ್ಯದ ಮೂಲಕ ಕನ್ನಡಕ್ಕೆ ಆರನೆ ಜ್ಞಾನಪೀಠ ತಂದುಕೊಟ್ಟು ಕನ್ನಡ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ ಡಾ.ಯು.ಆರ್.ಅನಂತಮೂರ್ತಿ ಅವರು ಸಂಸ್ಕಾರ, ಭವ, ಘಟಶ್ರಾದ್ಧ, ಬರ ಹೀಗೆ ಸಂಖ್ಯಾತ್ಮಕ ದೃಷ್ಟಿಯಿಂದ ಬೆರಳೆಣಿಕೆಯ ಕಾದಂಬರಿಗಳನ್ನು ಮತ್ತು ಕೆಲವು ಕಥಾ ಸಂಕಲನಗಳನ್ನು ಬರೆದು ಬರೆದದ್ದು ಕಡಿಮೆ ಎಂದೆನಿಸಿದರೂ ಅವರು ಬರೆದದ್ದೆಲ್ಲ ತುಂಬ ಮೌಲಿಕವಾದದ್ದು. 1960 ರ ದಶಕದಲ್ಲಿ ‘ಸಂಸ್ಕಾರ’ದಂಥ ಸಂಪ್ರದಾಯ ವಿರೋಧಿ ಕಾದಂಬರಿಯನ್ನು ಅದು ಕುರುಡು ನಂಬಿಕೆಗಳು ಅತ್ಯಂತ ಪ್ರಸ್ತುತವಾಗಿದ್ದ ದಿನಗಳಲ್ಲಿ ಬರೆಯಲು ಸಾಧ್ಯವಾಗಿದ್ದು ಮೂರ್ತಿಗಳಲ್ಲಿದ್ದ ಸಮಾಜದ ಕುರಿತಾದ ಕಳಕಳಿಗೆ ನಿಜವಾದ ದೃಷ್ಟಾಂತ. ಸಂಪ್ರದಾಯವನ್ನು ವಿರೋಧಿಸಿ ಬರೆಯಲು ತಮಗೆ ಹೇಗೆ ಸಾಧ್ಯವಾಯಿತು ಎನ್ನುವುದನ್ನು ತಮ್ಮ ಆತ್ಮಕಥನ ‘ಸುರಗಿ’ಯಲ್ಲಿ ಹೀಗೆ ಹೇಳಿಕೊಂಡಿರುವರು ‘ಅಪ್ಪ ಅಸ್ಪೃಶ್ಯ ಸಮುದಾಯಕ್ಕೆ ಸೇರಿದ್ದ ಹೊಲದ ಕೆಲಸದ ಆಳನ್ನು ತಮ್ಮ ಸಮಕ್ಕೆ ಕೂಡಿಸಿಕೊಂಡು ಊಟ ಹಾಕುತ್ತಿದ್ದ ಅಂದಿನ ಮನೆಯ ವಾತಾವರಣವೇ ನಾನು ಬದುಕುತ್ತಿದ್ದ ವ್ಯವಸ್ಥೆಯನ್ನು ವಿರೋಧಿಸಿ ಬರೆಯಲು ಸ್ಪೂರ್ಥಿ ನೀಡಿತು’. ಸಂಪ್ರದಾಯಗಳು ಜಡ್ಡುಗಟ್ಟಿದ ಆ ದಿನಗಳಲ್ಲೇ ಅನಂತಮೂರ್ತಿ ಅವರು ಅಂತರ್ ಧರ್ಮೀಯ ವಿವಾಹವಾಗಿದ್ದು ಅವರೊಳಗಿನ ಸಾಮಾಜಿಕ ಬದ್ಧತೆಗೆ ಸಾಕ್ಷಿಯಾಗಿದೆ. ಕೇವಲ ಉಪದೇಶಿಸದೆ ಹೇಳಿದ್ದನ್ನು ಸ್ವತ: ಕಾರ್ಯಗತ ಮಾಡಿತೋರಿಸಿದ ಅವರೊಳಗಿನ ಈ ಧಾಡಸಿತನದ ಗುಣವೇ ಅವರನ್ನು ವಿರೋಧಿಸುವವರಂತೆ ಮೆಚ್ಚುವ ಮತ್ತು ಅಭಿಮಾನಿಸುವ ಅಭಿಮಾನಿಗಳ ಪಡೆಯನ್ನೇ ಸೃಷ್ಟಿಸಿತು. ಡಾ.ಯು.ಆರ್.ಅನಂತಮೂರ್ತಿ ವೈಚಾರಿಕವಾಗಿ ಅತ್ಯಂತ ಪ್ರಬುದ್ಧರಾಗಲು ಮತ್ತು ತಾನು ಬದುಕುತ್ತಿದ್ದ ವ್ಯವಸ್ಥೆಯ ಅಪಸವ್ಯಗಳನ್ನು ವಿರೋಧಿಸುವಂತಾಗಲು ಅವರು ಪಡೆದ ಇಂಗ್ಲಿಷ್ ಶಿಕ್ಷಣವೂ ಕಾರಣವಾಯಿತು. ಬರ್ಮಿಂಗ್‍ಹ್ಯಾಮ್ ಯುನಿವರ್ಸಿಟಿಯಲ್ಲಿನ ಇಂಗ್ಲಿಷ್ ಶಿಕ್ಷಣ ಅವರನ್ನು ಬರಹಗಾರನ ಜೊತೆಗೆ ಒಬ್ಬ ಚಿಂತಕನನ್ನಾಗಿಯೂ ರೂಪಿಸಿತು. ಅದಕ್ಕೆಂದೇ ಅವರು ತಮ್ಮ ಬರಹ ಮತ್ತು ವೈಚಾರಿಕ ಚಿಂತನೆಗಳಿಂದ ತಾವು ಬದುಕುತ್ತಿದ್ದ ಸಮಾಜವನ್ನು ಕಾಲಕಾಲಕ್ಕೆ ಜಾಗೃತಗೊಳಿಸುತ್ತಲೇ ಬಂದರು. ಬರಹಗಾರನೊಬ್ಬ ಸಮಾಜದ ಸಮಸ್ಯೆಗಳು ಮತ್ತು ವ್ಶೆರುಧ್ಯಗಳಿಗೆ ಸದಾಕಾಲ ಮುಖಾಮುಖಿಯಾಗಿರಬೇಕು ಎನ್ನುವ ನಿಲುವು ಅವರದಾಗಿತ್ತು. ಉತ್ತಮವಾದದ್ದನ್ನು ಉತ್ತೇಜಿಸಿ ಮಾತನಾಡುತ್ತಿದುದ್ದಕಿಂತ ತಮಗೆ ಸರಿಕಾಣದ್ದನ್ನು ಅವರು ಖಂಡಿಸಿ ಮಾತನಾಡಿದ್ದೇ ಹೆಚ್ಚು. ಲೇಖಕ ಸತ್ಯನಾರಾಯಣ ಅವರು ಹೇಳುವಂತೆ ಲೇಖಕನಾದವನ ಕೆಲಸ ಸದಾಕಾಲ ಓದುಗರಿಗೆ ಪ್ರಿಯವಾದದ್ದನ್ನೇ ಹೇಳುವುದಲ್ಲ ಎನ್ನುವ ಮಾತು ಅನಂತಮೂರ್ತಿ ಅವರಿಗೆ ಹೆಚ್ಚು ಅನ್ವಯವಾಗುತ್ತದೆ. ಈ ಕಾರಣದಿಂದಲೇ ಅವರು ‘ಬರಹಗಾರ ಏನನ್ನೂ ಸುಲಭವಾಗಿ ಒಪ್ಪಿಕೊಳ್ಳದೆ ಎಲ್ಲವನ್ನೂ ಅನುಮಾನದಿಂದ ನೋಡಬೇಕು’ ಎಂದು  ಯುವಬರಹಗಾರರಿಗೆ ಕಿವಿಮಾತು ಹೇಳುತ್ತಿದ್ದರು.
ಮತ್ತಷ್ಟು ಓದು »