ಸೃಷ್ಟಿಯ ಅಗಾಧತೆಗೆ ಸವಾಲೆಸೆಯುವ ಮುನ್ನ…!
– ಸುಜಿತ್ ಕುಮಾರ್
ಇಡೀ ಭೂಖಂಡವೇ ತನ್ನದೆಂದುಕೊಂಡು ಒಂತಿಷ್ಟು ತಂತ್ರಜ್ಞಾನದ ಉನ್ನತಿಯ ಶಿಖರದ ಹಿನ್ನಲೆಯಲ್ಲಿ ಬೀಗುವ ಮಾನವ ನಿಸರ್ಗದ ಅಗಾಧತೆಯ ಮುಂದೆ ತಾನು ಅದೆಷ್ಟು ಕುಬ್ಜ ಕನಿಷ್ಠ ಎಂಬುದು ಇತ್ತೀಚಿಗೆ ಜರುಗುತ್ತಿರುವ ಪ್ರವಾಹ ಪ್ರಳಯಗಳ ಹಿನ್ನಲೆಯಲ್ಲಿ ಗಮನಿಸಿದರೆ ಬಹಳ ಸವಿವರವಾಗಿ ತಿಳಿಯುತ್ತದೆ. 4ಜಿ ಸ್ಪೀಡಿನ ಇಂಟೆರ್ನೆಟ್ಟು, ಜಗತ್ತನೇ ತನ್ನ ಮುಷ್ಠಿಯೊಳಗೆ ಭದ್ರವಾಗಿಸಿರುವ ಸ್ಮಾರ್ಟ್ ಫೋನುಗಳು, ಜನರೇಟರ್ ಗಳು, ಯುಪಿಎಸ್ಗಳು, ದೇಶದ ಮೂಲೆ ಮೂಲೆಯನ್ನು ಜೋಡಿಸುವ ಹೈ ಸ್ಪೀಡ್ ಟ್ರೈನುಗಳು, ಸಾಗರದ ಆಳೆತ್ತರಕ್ಕೆ ಹತ್ತಿಳಿಯುವ ಹಡಗುಗಳು ಹೀಗೆ ಪ್ರಸ್ತುತ ತಂತ್ರಜ್ಞಾನದ ಲೋಕದಲ್ಲಿ ಇರದಿರುವ ವಸ್ತುಗಳ್ಯಾವುವು? ಇಷ್ಟೆಲ್ಲಾ ಆಧುನಿಕ ಪರಿಕರಗಳ ನಡುವೆ ಅಮೃತವಿಲ್ಲದೆಯೇ ಸಕಾಲಕ್ಕೂ ಅಮರನಾಗಿಬಿಡುವ ಮಾನವ ಇಂದು ಆಗಿರುವುದಾದರೂ ಏನು ಸ್ವಾಮಿ. ಕೇವಲ ನಾಲ್ಕೇ ನಾಲ್ಕು ದಿನದ ಮಳೆಗೆ ಆತ ಗುಡಿ ಗೋಪುರಾದಿಗಳನ್ನು ತರಗಲೆಗಳಂತೆ ಕಳೆದುಕೊಂಡು ಅಕ್ಷರಸಹ ಅನಾಥನಾಗುತ್ತಿರುವ ದೃಶ್ಯಾವಳಿಗಳನ್ನು ನೋಡಿದರೆ ದುಃಖ ಹಾಗು ಎದೆನಡುಕಗಳು ಒಟ್ಟೊಟ್ಟಿಗೆ ಮೂಡುತ್ತವೆ. ಪ್ರಸ್ತುತ ಜರುಗತ್ತಿರುವ ಪ್ರಕೃತಿ ವಿಕೋಪಗಳಿಗೆ ಕೇವಲ ಮಳೆಯೊಂದೇ ಕಾರಣವಲ್ಲದಾದರೂ ಇತರೆ ಮತ್ಯಾವುದೇ ಕಾರಣಗಳಾದರೂ ಅದಕ್ಕೆ ಮಾನವನೊಬ್ಬನೇ ನೇರ ಹೊಣೆಗಾರನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಬೇಡ. ಸೃಷ್ಟಿಯ ಸಮಷ್ಟಿಯಲ್ಲಿ ನಾನೂ ಒಬ್ಬನೇ ಹೊರತು ನಾನೇ ಬೇರೆ, ಪ್ರಕೃತಿಯೇ ಬೇರೆ, ಇಡೀ ಭೂಮಿಯೇ ನನ್ನ ಅನುಭೋಕಕ್ಕೆ ಮಾತ್ರ ಎಂಬ ಭ್ರಮೆಯಲ್ಲಿ ಬದುಕುತ್ತಿರುವ ನಾವುಗಳಿಗೆ ನೇಸರ ಆಗೊಮ್ಮೆ ಹೀಗೊಮ್ಮೆ ಹೀಗೆ ಚಾಟಿ ಏಟನ್ನು ಬೀಸುತ್ತಿರುತ್ತದೆ. ಎಚ್ಚರಿಸುತ್ತಿರುತ್ತದೆ. ಏಟಿನಿಂದ ಕಲಿಯುತ್ತೇವೆಯೋ ಅಥವಾ ಮತ್ತದೇ ನನ್ನದೇ ಎಲ್ಲವೆಂಬ ಅಮಲಿನಲ್ಲಿ ಕುಣಿಯುತ್ತೇವೆಯೋ ಅದು ನಮ್ಮ್ ನಮ್ಮ ನಾಗರೀಕತೆಯ ವಿವೇಕಕ್ಕೆ ಬಿಟ್ಟ ವಿಚಾರ.