ಬರಹಗಾರನ ತಲ್ಲಣಗಳು
ಹಚ್ಚಿದರೆ ದೀಪ ಹಚ್ಚು, ಬೆಂಕಿ ಹಚ್ಚಬೇಡ; ಆರಿಸಿದರೆ ಬೆಂಕಿ ಆರಿಸು, ದೀಪ ಆರಿಸಬೇಡ – ದಿನಕರ ದೇಸಾಯಿ
ತೀರ ಬೇಸರ, ಅವಮಾನದ ಸಂದರ್ಭ, ಖಿನ್ನತೆ ಮನಸ್ಸನ್ನು ಆವರಿಸಿದಾಗ ಆ ಘಳಿಗೆ ನಾನು ಓದಿನ ಮೊರೆ ಹೋಗುತ್ತೇನೆ. ಓದುತ್ತ ಹೋದಂತೆ ಬರಹಗಾರನ ತಲ್ಲಣಗಳೆದುರು ನನ್ನ ವೈಯಕ್ತಿಕ ಸಂಕಟಗಳೆಲ್ಲ ತೀರ ಸಣ್ಣ ಸಂಗತಿಗಳೆನಿಸಿ ಆ ಕ್ಷಣ ಮನಸ್ಸನ್ನು ಆವರಿಸಿದ ಖಿನ್ನತೆಯ ತೆರೆ ಸರಿದು ಹೋಗುತ್ತದೆ. ಬರಹಗಾರರ ಸಮಾಜಮುಖಿ ತಲ್ಲಣಗಳ ಎದುರು ನನ್ನ ವೈಯಕ್ತಿಕ ತಲ್ಲಣಗಳು ಸೋತು ನೆಲಕಚ್ಚುತ್ತವೆ. ಈ ದೃಷ್ಟಿಯಿಂದ ನಾನು ಬರಹಗಾರರಿಗೆ ಮತ್ತು ಅವರೊಳಗಿನ ತಲ್ಲಣಗಳಿಗೆ ಹೆಚ್ಚು ಕೃತಜ್ಞನಾಗಿದ್ದೇನೆ. ನನ್ನನ್ನಾವರಿಸುವ ಬೇಸರದಿಂದ ಹೊರಬರಲು ಓದು ನನಗೆ ಪರ್ಯಾಯ ಮಾರ್ಗವಾಗಿ ತೋರುತ್ತದೆ. ಮನುಷ್ಯ ಸಂಬಂಧಗಳಿಂದ ಮನಸ್ಸು ಘಾಸಿಗೊಂಡಾಗ ನಾನು ಕಾಫ್ಕಾನ ಮೆಟಾಮಾರ್ಫಸಿಸ್ ಕಥೆಯನ್ನು ಮತ್ತೆ ಮತ್ತೆ ಓದಿಗೆ ಕೈಗೆತ್ತಿಕೊಳ್ಳುತ್ತೇನೆ. ಮನುಷ್ಯ ಸಂಬಂಧಗಳು ಸಂದರ್ಭದ ಕೈಗೆ ಸಿಲುಕಿ ಹೇಗೆ ಬದಲಾಗುತ್ತ ಹೋಗುತ್ತವೆ ಎನ್ನುವುದನ್ನು ಗ್ರೇಗರ್‍ನ ಪಾತ್ರದ ಮೂಲಕ ಕಾಫ್ಕಾ ತುಂಬ ಅನನ್ಯವಾಗಿ ಹೇಳುತ್ತಾನೆ. ಕಥೆ ಕಾಲ್ಪನಿಕವಾಗಿದ್ದರೂ ಅಲ್ಲಿ ಮನುಷ್ಯ ಸಂಬಂಧಗಳನ್ನು ಬದಲಾದ ಸನ್ನಿವೇಶದಲ್ಲಿ ನೋಡುವ ಕಾಫ್ಕಾನ ತಲ್ಲಣಗಳಿವೆ. ಅನಂತಮೂರ್ತಿ ಅವರ ಕಥೆಗಳು, ಭೈರಪ್ಪನವರ ಕಾದಂಬರಿಗಳು, ಮಹಾದೇವರ ಲೇಖನಗಳನ್ನು ಓದುವಾಗಲೆಲ್ಲ ಈ ಬರಹಗಾರರ ತಲ್ಲಣಗಳು ಒಬ್ಬ ಓದುಗನಾಗಿ ನನಗೆ ಅನೇಕ ಸಲ ಎದುರಾದದ್ದುಂಟು. ಮತ್ತಷ್ಟು ಓದು